
ಮುಡಾ ಹಗರಣ ಸಂಬಂಧ ಮತ್ತೆ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆಗೆ ಆದೇಶ ನಿರಾಕರಿಸಿದ ಹೈಕೋರ್ಟ್ ತೀರ್ಪಿನ ವಿರುದ್ದ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಿಲ್ಲ ಎಂದು ತಿಳಿಸಿದ್ದರು. ಆದರೆ ಇದೀಗ ಹೈಕೋರ್ಟ್ನಲ್ಲಿಯೇ ಮೇಲ್ಮನವಿ ಸಲ್ಲಿಸಿದ್ದಾರೆ.
ಹೈಲೈಟ್ಸ್:
- ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ
- ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಮೇಲ್ಮನವಿ
- ಫೆಬ್ರವರಿ 7ರಂದು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು ಏಕಸದಸ್ಯ ಪೀಠ
ಬೆಂಗಳೂರು/ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಹೈಕೋರ್ಟ್ನ ಏಕಸದಸ್ಯ ಪೀಠವು ನೀಡಿರುವ ತೀರ್ಪು ಪ್ರಶ್ನಿಸಿ ಮೂಲ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದಾರೆ.
ಮಂಗಳವಾರ ಅವರು ಮೇಲ್ಮನವಿ ಸಲ್ಲಿಸಿದ್ದು, ಅದಿನ್ನೂ ವಿಚಾರಣೆಗೆ ನಿಗದಿಯಾಗಬೇಕಿದೆ. ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಫೆಬ್ರವರಿ 7ರಂದು ವಜಾ ಮಾಡಿತ್ತು.
ವಿಚಾರಣಾಧೀನ ನ್ಯಾಯಾಲಯಕ್ಕೆ ಸಿಆರ್ಪಿಸಿ ಸೆಕ್ಷನ್ 156(3) ಅಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಧಿಕಾರವಿಲ್ಲ. ಈ ಅಧಿಕಾರ ಹೈಕೋರ್ಟ್ಗೆ ಸಂವಿಧಾನದ 22ನೇ ವಿಧಿ ಮತ್ತು ಸುಪ್ರೀಂ ಕೋರ್ಟ್ಗೆ ಸಂವಿಧಾನದ 32 ಅಥವಾ 142ನೇ ವಿಧಿಯಡಿ ಮಾತ್ರ ಇದೆ ಎಂಬುದನ್ನು ಅರ್ಥೈಸಿಕೊಳ್ಳುವಲ್ಲಿ ಕೋರ್ಟ್ ವಿಫಲವಾಗಿದೆ. ಅಲ್ಲದೆ, ಪ್ರಕರಣವನ್ನು ಸಿಬಿಐ ಅಥವಾ ಬೇರಾವುದಾದರೂ ಸ್ವತಂತ್ರ ತನಿಖಾ ಸಂಸ್ಥೆ ನಡೆಸಬೇಕು ಎಂದು ಆರಂಭದಿಂದಲೂ ಕೋರುತ್ತಿರುವುದಾಗಿ ಸ್ನೇಹಮಯಿ ಕೃಷ್ಣ ವಿವರಿಸಿದ್ದಾರೆ. ಕಳೆದ ತಿಂಗಳು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದನ್ನು ಪ್ರಶ್ನಿಸಿ ಪ್ರತಿಭಟನಾ ಅರ್ಜಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ವಿಚಾರಣೆ ನ್ಯಾಯಾಲಯದಲ್ಲಿ ವಾದಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧದ ‘ಮುಡಾ’ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದರು.”ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಮತ್ತು ಪ್ರಕ್ರಿಯೆಯನ್ನು ವಿಳಂಬಗೊಳಿಸುವ ಬದಲು ನನ್ನ ಬಳಿ ಇರುವ ಮತ್ತು ಮುಂದೆ ಪಡೆಯುವ ಸಾಕ್ಷ್ಯಗಳ ಆಧಾರದ ಮೇಲೆ ಪ್ರಕರಣವನ್ನು ಮುಂದುವರಿಸಲು ನಿರ್ಧರಿಸಿದ್ದೇನೆ,” ಎಂದು ತಿಳಿಸಿದ್ದರು.
‘ಮುಡಾ’ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ ಹಾಗೂ ಅವರ ಭಾಮೈದುನ ಮಲ್ಲಿಕಾರ್ಜುನ ಸ್ವಾಮಿ ಆರೋಪಿಗಳಾಗಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚಿಗೆ ರದ್ದುಗೊಳಿಸಿತ್ತು.
ಇದೀಗ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ಗೇ ಮೇಲ್ಮನವಿ ಸಲ್ಲಿಸಿದ್ದಾರೆ.